ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸಿಲಿಂಡರ್ ಲಾರಿಗೆ ಡಿಕ್ಕಿ ; ಮೂವರು ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

08-08-26 12:10 pm       HK News Staffer   ಕ್ರೈಂ

ಮಳೆಗಾಲದ ಹಿನ್ನೆಲೆಯಲ್ಲಿ ಮಲೆನಾಡಿನತ್ತ ಪ್ರವಾಸಿಗರ ದಂಡೇ ಹರಿದುಬರುತ್ತಿರುವ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸಿಲಿಂಡರ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು, ಆ. 8: ಮಳೆಗಾಲದ ಹಿನ್ನೆಲೆಯಲ್ಲಿ ಮಲೆನಾಡಿನತ್ತ ಪ್ರವಾಸಿಗರ ದಂಡೇ ಹರಿದುಬರುತ್ತಿರುವ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸಿಲಿಂಡರ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ಈ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.