ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ: ಓಮ್ನಿ-ಗೂಡ್ಸ್ ವಾಹನ ಡಿಕ್ಕಿ, ಮೂವರು ಮಹಿಳೆಯರು ಸಾವು

07-09-26 03:42 pm       HK News Staffer   ಕ್ರೈಂ

ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳಾ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 07: ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳಾ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ನಡೆದಿದೆ.

ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದ್ದು, ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ್ಮ (45) ಹಾಗೂ ಮುನಿಚೆನ್ನಮ್ಮ (40) ಮೃತಪಟ್ಟ ದುರ್ದೈವಿಗಳು.

ಹೂ ಕಟಾವಿಗೆ ತೆರಳುತ್ತಿದ್ದಾಗ ದುರಂತ

ಮಲ್ಲಿಕಾರ್ಜುನಪುರ ಗ್ರಾಮದಿಂದ ಹುಜುಗೂರು ಗ್ರಾಮಕ್ಕೆ ಹೂ ಕಟಾವು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೂ ಕಟಾವು ಕೆಲಸಕ್ಕಾಗಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ರಾಮಚಂದ್ರಪ್ಪ ಅವರಿಗೆ ಸೇರಿದ ಓಮ್ನಿ ಕಾರಿನಲ್ಲಿ ಸುಮಾರು 10 ಮಂದಿ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕೊತ್ತನೂರು ಗೇಟ್ ಸಮೀಪ ಓಮ್ನಿ ಕಾರು ಸಾಗುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಕಾರ್ಮಿಕರಿಗೆ ಗಾಯಗಳಾಗಿವೆ. ಈ ಪೈಕಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಚಾಲಕ ಸೇರಿ ಹಲವರಿಗೆ ಗಾಯ

ಅಪಘಾತದಲ್ಲಿ ಓಮ್ನಿ ಕಾರಿನ ಚಾಲಕ ಮನೋಜ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಚಾಲಕ ಮನೋಜ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಕೆಲ ಮಹಿಳಾ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.