ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ: ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಸ್ಕೂಟರ್ ಮೂವರು ಸಾವು, ಬೈಕ್‌ಗೆ KSRTC ಬಸ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

15-09-26 12:41 pm       HK News Staffer   ಕ್ರೈಂ

ಗೌರಿ-ಗಣೇಶ ಹಬ್ಬದ ಸಂಭ್ರಮದ ಬೆನ್ನಲ್ಲೇ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಗಳು ಆರು ಜೀವಗಳನ್ನು ಬಲಿ ಪಡೆದಿವೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಹಾಲಿನ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದರೆ, ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಡ್ಯ/ಬೆಳಗಾವಿ , ಸೆಪ್ಟೆಂಬರ್ 15: ಗೌರಿ-ಗಣೇಶ ಹಬ್ಬದ ಸಂಭ್ರಮದ ಬೆನ್ನಲ್ಲೇ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಗಳು ಆರು ಜೀವಗಳನ್ನು ಬಲಿ ಪಡೆದಿವೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಹಾಲಿನ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದರೆ, ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್‌ ಬರುತ್ತಿದ್ದ ಕುಟುಂಬಕ್ಕೆ ದುರಂತ

ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಸುಕಿನ ಜಾವ ಸುಮಾರು 4 ಗಂಟೆಗೆ ಈ ಅಪಘಾತ ಸಂಭವಿಸಿದೆ. ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದ ಬೆಂಗಳೂರು ಮೂಲದ ಮುತ್ತುರಾಜ್ (35), ಅವರ ಪತ್ನಿ ಕಾವ್ಯ (30) ಹಾಗೂ ಎಂಟು ವರ್ಷದ ಪುತ್ರಿ ಕೀರ್ತನಾ ಹಬ್ಬದ ಸಂಭ್ರಮ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿಗೆ ವಾಪಸ್‌ ತೆರಳುತ್ತಿದ್ದರು.

ಕೊಪ್ಪ ಗ್ರಾಮದ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮುತ್ತುರಾಜ್, ಕಾವ್ಯ ಹಾಗೂ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿಯ ಮತ್ತೊಂದು ಮಗು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಸಿಟಿವಿಯಲ್ಲಿ ಭೀಕರ ಅಪಘಾತ ದೃಶ್ಯ

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ದಂಪತಿ ಹಾಗೂ ಮಕ್ಕಳು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ದುರಂತ ಎದುರಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಳಗಾವಿಯಲ್ಲಿ ಬೈಕ್‌ಗೆ KSRTC ಬಸ್ ಡಿಕ್ಕಿ

ಇತ್ತ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ.  ಮೃತರನ್ನು ವಿನೋದ ಹೊಗೆನ್ನವರ (22), ಆಕಾಶ್ ಜಾಧವ (20) ಹಾಗೂ ರವಿ ಕುರುಬರ (22) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಸವದತ್ತಿ ಪಟ್ಟಣದ ನಿವಾಸಿಗಳು ಎಂದು ತಿಳಿದುಬಂದಿದೆ.

ಕೆಎಸ್‌ಆರ್‌ಟಿಸಿ ಬಸ್ ಸವದತ್ತಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಎರಡೂ ಘಟನೆಗಳ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.