ಮಂಗಳೂರಲ್ಲಿ ಡ್ರಗ್ಸ್ ಜಾಲಕ್ಕೆ ಸಿಸಿಬಿ ಶಾಕ್ : ₹ 24 ಲಕ್ಷದ MDMA ಸಹಿತ ಮೂವರು ಅರೆಸ್ಟ್ , ಕೋಣಾಜೆ ಬಳಿ ಕಾರ್ಯಾಚರಣೆ

28-09-26 03:08 pm       HK News Staffer   ಕ್ರೈಂ

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಡ್ರಗ್ ಪೆಡ್ಲರ್‌ಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದು ಬಂಧಿತರನ್ನು ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್ (35), ಮೊಹಮ್ಮದ್ ಆರೀಫ್ ಎನ್. (36) ಹಾಗೂ ಲಾಯ್ಡ್ ಡಿಸೋಜಾ (35) ಎಂದು ಗುರುತಿಸಲಾಗಿದೆ.

ಮಂಗಳೂರು, ಸೆ.28 : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಡ್ರಗ್ ಪೆಡ್ಲರ್‌ಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದು ಬಂಧಿತರನ್ನು ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್ (35), ಮೊಹಮ್ಮದ್ ಆರೀಫ್ ಎನ್. (36) ಹಾಗೂ ಲಾಯ್ಡ್ ಡಿಸೋಜಾ (35) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ MDMA ತಂದು ಮಾರಾಟ?

ಪೊಲೀಸರ ಪ್ರಕಾರ, ಆರೋಪಿಗಳು ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು. ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯ ತಂಡ ಸೆಪ್ಟೆಂಬರ್ 26ರ ಸಂಜೆ ಉಳ್ಳಾಲ ತಾಲೂಕಿನ ಮುಡಿಪು ಕಾಯರ್‌ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದೆ.

₹29.80 ಲಕ್ಷ ಮೌಲ್ಯದ ಸೊತ್ತು ವಶ

ಕಾರ್ಯಾಚರಣೆಯಲ್ಲಿ ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತು ಸಾಗಾಟಕ್ಕೆ ಬಳಸಲಾಗಿದ್ದ ಒಂದು ಟೆಂಪೋ ವಾಹನ ಹಾಗೂ ನಾಲ್ಕು ಮೊಬೈಲ್ ಫೋನ್‌ಗಳನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹29.80 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಮುಡಿಪು ನವಾಜ್ ವಿರುದ್ಧ 16 ಪ್ರಕರಣ 

ಬಂಧಿತ ಪ್ರಮುಖ ಆರೋಪಿ ಮುಡಿಪು ನವಾಜ್ ಹಳೇ ರೌಡಿಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ದನಗಳ್ಳತನ ಹಾಗೂ ಡ್ರಗ್ಸ್ ಮಾರಾಟ ಸೇರಿದಂತೆ ಒಟ್ಟು 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 12, ಉಳ್ಳಾಲ ಠಾಣೆಯಲ್ಲಿ 2 ಹಾಗೂ ಮುಲ್ಕಿ ಮತ್ತು ಸುರತ್ಕಲ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿವೆ. ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಹಾಗೂ ಕೊಣಾಜೆ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್ ಜಾಲದ ಹಿಂದೆ ಇನ್ನಷ್ಟು ಮಂದಿ?

ಪ್ರಕರಣದ ತನಿಖೆ ಮುಂದುವರಿದಿದ್ದು, ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.

Mangaluru City CCB police have arrested three people for allegedly selling the banned drug MDMA in the city and seized 240 grams of MDMA valued at ₹24 lakh. The total value of the seized property is estimated at ₹29.80 lakh.