ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಣೆ ; ಸಂಪ್ಯ ಪೊಲೀಸರ ಕಾರ್ಯಾಚರಣೆ, ಇಬ್ಬರು ಪರಾರಿ, ಗೋವನ್ನು ಮಾರಾಟ ಮಾಡಿದ್ದ ವ್ಯಕ್ತಿಯ ಬಂಧನ

05-10-26 08:24 pm       HK News Staffer   ಕ್ರೈಂ

ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ ಅಡ್ಡಗಟ್ಟಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆ ವೇಳೆ ಚಾಲಕ ಸಹಿತ ಇಬ್ಬರು ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ.

ಪುತ್ತೂರು, ಅ.5 : ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಎಂಬಲ್ಲಿ ಅಡ್ಡಗಟ್ಟಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆ ವೇಳೆ ಚಾಲಕ ಸಹಿತ ಇಬ್ಬರು ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. 

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಸ್ಯದ ಮಯ್ಯ ಫಾರ್ಮ್ಸ್ ನಿಂದ ಮುಂಜಾನೆ ಸುಮಾರು 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಪಿಕಪ್ ವಾಹನದಲ್ಲಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು. ಗೋವುಗಳ ಕೈಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಯಾವುದೇ ಪರವಾನಗಿ ಇಲ್ಲದೆ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಯಾವುದೇ ಪರವಾನಗಿ ಇಲ್ಲದೆ ಗೋವುಗಳನ್ನು ಮಾರಾಟ ಮಾಡಿದ್ದ ಶಿವಪ್ರಸಾದ್ ಎಂಬಾತನನ್ನು ಬಂಧಿಸಿದ್ದಾರೆ.