ಬೈಕಂಪಾಡಿಯಲ್ಲಿ ಲಾರಿ- ಸ್ಕೂಟರ್ ಡಿಕ್ಕಿ ; ಸವಾರ ತೀವ್ರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವು

02-11-26 09:44 pm       HK News Staffer   ಕ್ರೈಂ

ನಗರ ಹೊರವಲಯದ ಬೈಕಂಪಾಡಿಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಳೆಯಂಗಡಿ ಕದಿಕೆ ನಿವಾಸಿ ಇಮ್ತಿಯಾಝ್ (39) ಮೃತಪಟ್ಟವರು.

ಮಂಗಳೂರು, ನ.2 

ಇಮ್ತಿಯಾಝ್ ಅವರು ಖಾಸಗಿ ಶಿಪ್ಪಿಂಗ್ ಕಂಪನಿಯೊಂದರಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ ಪಣಂಬೂರಿನಲ್ಲಿರುವ ತಮ್ಮ ಕಂಪನಿಯ ಕಚೇರಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿ ಹಾಗೂ ಇಮ್ತಿಯಾಝ್ ಅವರ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ್ದು, ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. 

ಘಟನೆ ನಡೆದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಇಮ್ತಿಯಾಝ್ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.