ಮಳೆ ರಜೆ ಆದೇಶ ಪಾಲನೆ ಆಗದಿದ್ದಲ್ಲಿ ಕಠಿಣ ಕ್ರಮ ; ಇಂಜಿನಿಯರಿಂಗ್ ಕಾಲೇಜು ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ತಾಕೀತು 

09-07-22 10:41 pm       Mangalore Correspondent   ಕರಾವಳಿ

ದ.ಕ‌. ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕೆ ದೃಷ್ಟಿಯಿಂದ ರಜೆ ನೀಡಲಾಗುತ್ತಿದೆ. ಜಿಲ್ಲಾಡಳಿತದ ರಜೆ ಆದೇಶವನ್ನು ಸಂಬಂಧಿಸಿದ ಎಲ್ಲ ಶಾಲೆ, ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕು.

ಮಂಗಳೂರು, ಜು.9 : ದ.ಕ‌. ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕೆ ದೃಷ್ಟಿಯಿಂದ ರಜೆ ನೀಡಲಾಗುತ್ತಿದೆ. ಜಿಲ್ಲಾಡಳಿತದ ರಜೆ ಆದೇಶವನ್ನು ಸಂಬಂಧಿಸಿದ ಎಲ್ಲ ಶಾಲೆ, ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕು. ಅದಕ್ಕೆ ಯಾವುದೇ ಇಂಜಿನಿಯರಿಂಗ್ ಕಾಲೇಜು ಕೂಡ ಹೊರತಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಾಕೀತು ಮಾಡಿದ್ದಾರೆ. 

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿ ವಿಕೋಪ ನಿರ್ವಹಣೆಯಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರ ಜೊತೆಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ವ್ಯವಸ್ಥೆ ಹೇಗಿದೆ ಎನ್ನುವ ಬಗ್ಗೆ ಮೊದಲು ಸಮೀಕ್ಷೆ ಮಾಡಬೇಕು‌. ಯಾವ ಹಳ್ಳಿ, ಹಾಸ್ಟೆಲ್ ಅಥವಾ ಇತರೆ ವ್ಯವಸ್ಥೆಗಳು ಸೇರಿದಂತೆ ಕಾಲೇಜಿಗೆ ಹೇಗೆ ಬರುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬೇಕು, ಜಿಲ್ಲಾಡಳಿತ ರಜೆ ಘೋಷಿಸಿದಾಗ ಕಡ್ಡಾಯವಾಗಿ ರಜೆ ನೀಡಲೇಬೇಕು. ಆದೇಶ ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಅಧಿನಿಯಮದ 24-34ರ ನಿಯಮಗಳನುಸಾರ  ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲಾಡಳಿತ ಒಂದು ಬಾರಿ ಆದೇಶ ಹೊರಡಿಸಿದರೆ ಅದು ಅಧಿಕೃತ ಹಾಗೂ ಅಂತಿಮ. ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಎಚ್ಚರಿಕೆ ನೀಡಿದರು. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಪ್ರಭಾರ ಆಯುಕ್ತ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಮಂಗಳೂರು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್. ಗುರುಪ್ರಸಾದ್, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸೇರಿದಂತೆ ವಿವಿಧ ಕಾಲೇಜಿನ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು ಉಪಸ್ಥಿತರಿದ್ದರು.

Mangalore Dc Rajendra slams engineering colleges for not granting holiday to students amid rains.