MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ ; ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಿರ್ಧಾರ, 2,000ಕ್ಕೂ ಅಧಿಕ ಕಾರ್ಮಿಕ ಕುಟುಂಬಗಳಿಗೆ ಪ್ರಯೋಜನ 

15-10-26 10:34 pm       HK News Desk   ಕರಾವಳಿ

 ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL) ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳಿಗೆ ₹ 5 ಲಕ್ಷದ ಆರೋಗ್ಯ ವಿಮೆ ಒದಗಿಸುವ ಪ್ರಸ್ತಾವನೆಗೆ ಕೊನೆಗೂ ಒಪ್ಪಿಗೆ ದೊರೆತಿದೆ.

ಮಂಗಳೂರು, ಅ.15: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL) ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳಿಗೆ ₹ 5 ಲಕ್ಷದ ಆರೋಗ್ಯ ವಿಮೆ ಒದಗಿಸುವ ಪ್ರಸ್ತಾವನೆಗೆ ಕೊನೆಗೂ ಒಪ್ಪಿಗೆ ದೊರೆತಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಆರೋಗ್ಯ ವಿಮೆ ಯೋಜನೆಯಿಂದ MRPLನಲ್ಲಿ ದುಡಿಯುತ್ತಿರುವ 2,000ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರ ಕುಟುಂಬಗಳಿಗೆ ಅನುಕೂಲವಾಗಲಿದೆ. ಕಾರ್ಮಿಕರು ಹಾಗೂ ಅವರ ಕುಟುಂಬಗಳ ಆರೋಗ್ಯ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಮಹತ್ವ ಪಡೆದಿದೆ.

ಎಂಟು ವರ್ಷಗಳ ಬೇಡಿಕೆಗೆ ಸ್ಪಂದನೆ 

MRPL ಗುತ್ತಿಗೆ ಕಾರ್ಮಿಕರಿಗೆ ಆರೋಗ್ಯ ವಿಮೆ ಒದಗಿಸಬೇಕೆಂಬ ಬೇಡಿಕೆ ಕಳೆದ ಎಂಟು ವರ್ಷಗಳಿಂದ ಕೇಳಿಬರುತ್ತಿತ್ತು. ಈ ವಿಚಾರವಾಗಿ ಕಳೆದ ವರ್ಷ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು. ಆ ಸಂದರ್ಭದಲ್ಲಿ ಗುತ್ತಿಗೆ ಕಾರ್ಮಿಕರಿಗೆ ಆರೋಗ್ಯ ವಿಮೆ ಒದಗಿಸುವ ಅಗತ್ಯದ ಕುರಿತು ಚರ್ಚೆ ನಡೆಸಲಾಗಿತ್ತು. ಈಗ ಸಂಸದರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ವಿಮೆ ಒದಗಿಸುವ ಪ್ರಸ್ತಾವನೆಗೆ ಒಪ್ಪಿಗೆ ದೊರೆತಿದ್ದು, ಕಾರ್ಮಿಕರ ಬಹುಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಹತ್ವದ ಪ್ರಗತಿ ಸಾಧಿಸಿದಂತಾಗಿದೆ.

ಮಹಿಳಾ ಕಾರ್ಮಿಕರಿಗೂ ವಿಶೇಷ ಸೌಲಭ್ಯ 

ಆರೋಗ್ಯ ವಿಮೆಯ ಜೊತೆಗೆ MRPLನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಗುತ್ತಿಗೆ ಕಾರ್ಮಿಕರ ಸೌಲಭ್ಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಮಹಿಳಾ ಕಾರ್ಮಿಕರ ಅಗತ್ಯಗಳನ್ನು ಗಮನದಲ್ಲಿಟ್ಟು ಅವರಿಗೆ ಪ್ರತ್ಯೇಕ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿ ಒದಗಿಸಲು ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ಮಹಿಳಾ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಅಗತ್ಯ ಮೂಲಸೌಕರ್ಯ ಮತ್ತು ಉತ್ತಮ ಕಾರ್ಯ ಪರಿಸರ ಕಲ್ಪಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.

ಸಂಸದರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ರಾಜು, ಎಂಆರ್ ಪಿಎಲ್ ಉನ್ನತಾಧಿಕಾರಿಗಳು ಹಾಗೂ ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಕಾರ್ಮಿಕರ ಸಮಸ್ಯೆಗಳು ಮತ್ತು ಅವರ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

In a significant development for contract workers at Mangalore Refinery and Petrochemicals Limited (MRPL), a decision has been taken to provide health insurance coverage of up to ₹5 lakh. The initiative is expected to benefit more than 2,000 contract workers’ families.